ಸಾರಾಂಶ
ನವದೆಹಲಿ : ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಇಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ, ಮನವಿ ಸಲ್ಲಿಕೆಯ ಜೊತೆಗೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಸಚಿವರನ್ನು ಭೇಟಿ ಮಾಡಿದ ಪಾಟೀಲರು, ʻಬೆಂಗಳೂರಿನ ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಆಯ್ಕೆ ಮಾಡಿದ್ದ ಮೂರು ಸ್ಥಳಗಳಲ್ಲಿ ಒಂದನ್ನು ಶೀಘ್ರವೇ ಅಂತಿಮಗೊಳಿಸಿದರೆ ಕೆಲಸ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆʼ ಎಂದಿದ್ದಾರೆ. ವಿಜಯಪುರದಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬಾಕಿರುವ ಬಗ್ಗೆ ಚರ್ಚಿಸಿದರು.
ಮೈಸೂರು, ಶಿವಮೊಗ್ಗ, ಹಾಸನ, ಕಾರವಾರ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆಯೂ ಸುದೀರ್ಘ ವಾದ ಚರ್ಚೆ ನಡೆದಿದೆ.