ಸಾರಾಂಶ
ಗುಡಿಬಂಡೆ : ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದಂತೆ ಎಲ್ಲ ಗ್ಯಾರಂಟಿಗಳನ್ನು ನೀಡುವ ಮೂಲಕ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಇಂತಹ ಪಕ್ಷವನ್ನು ತಾವೆಲ್ಲ ಬೆಂಬಲಿಸಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮತದಾರರಲ್ಲಿ ಮನವಿ ಮಾಡಿದರು.
ತಾಲೂಕಿನ ಉಲ್ಲೋಡು, ದಪ್ಪರ್ತಿ, ಹಂಪಸಂದ್ರ ಹಾಗೂ ಎಲ್ಲೋಡು ಪಂಚಾಯತಿ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆಯ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಭರವಸೆ ಹುಸಿ
ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಮಯದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಗೃಹಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹ ಲಕ್ಷ್ಮೀ ಗ್ಯಾರಂಟಿಗಳು ಘೋಷಣೆ ಮಾಡಲಾಗಿತ್ತು. ಈ ಎಲ್ಲಾ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಆದರೆ ಬಿಜೆಪಿ ಸರ್ಕಾರ ಯಾವ ಗ್ಯಾರಂಟಿಯನ್ನೂ ನೀಡಿಲ್ಲ. ಅವರು ನೀಡಿದ ಎಲ್ಲಾ ಭರವಸೆಗಳು ಸುಳ್ಳಾಗಿದೆ. ಚುನಾವಣೆ ಸಮಯದಲ್ಲಿ ಹೇಳೋದು ಒಂದು ಅವರು ಮಾಡೋದು ಒಂದು. ಬಿಜೆಪಿ ಸರ್ಕಾರದಲ್ಲಿ ಕೊಮುಗಲಭೆಗಳು, ಗಲಾಟೆಗಳು ಬಿಟ್ಟರೇ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.
ನಾವು ಹೋದ ಕಡೆಯಲ್ಲ ಕಾಂಗ್ರೆಸ್ ಗ್ಯಾರಂಟಿಗಳನ್ನು ಪಡೆದುಕೊಂಡ ಮತದಾರರು ಪಕ್ಷಾತೀತವಾಗಿ ಬೆಂಬಲಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದನೆ ನೀಡುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಕಾರ್ಯಕರ್ತರೆ ದೊಡ್ಡ ಶಕ್ತಿ, ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸಿ, ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಹಾಗೂ ಜನಪರ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಅಧಿಕಾರಿಕ್ಕೆ ಬಂದರೆ ‘ಗ್ಯಾರಂಟಿ’
ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ, ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ, ನರೇಗಾದ ಕೂಲಿ ಹಣ 400 ರು.ಗೆ ಹೆಚ್ಚಳ, ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಗ್ಯಾರಂಟಿಗಳನ್ನು ಈಡೇರಿಸಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತದಲ್ಲಿದೆ. ಅದೇ ರೀತಿ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಯುತ್ತದೆ. ಆದ್ದರಿಂದ ಈ ಬಾರಿ ತಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯನವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಈ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕು ಮಟ್ಟದ ಪದಾಧಿಕಾರಿಗಳು, ಗ್ರಾ.ಪಂ. ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರು ಹಾಜರಿದ್ದರು.