ಸಾರಾಂಶ
ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಂದೇಶ ನೀಡಿರುವ ಅವರು, ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದ್ದೇನೆ.
ಇದು ನಮ್ಮ ಪಕ್ಷದ ಬದ್ಧತೆ ಸಹ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ.
ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗೀಕಾರ ಪಡೆದು ಚಾಲನೆ ನೀಡಿದ್ದೆವು ಎಂದು ವಿವರಿಸಿದ್ದಾರೆ.
ಭರವಸೆಯಂತೆ ಐದು ಗ್ಯಾರೆಂಟಿ ಯೋಜನೆಗಳು ಅನುಷ್ಠಾನಗೊಂಡಿವೆ. ದೇಶದ ಯಾವುದೇ ರಾಜ್ಯ ಸರ್ಕಾರ ಸಹ ಇಂತಹ ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳುತ್ತೇನೆ.
ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು ನಾವು ಮರೆತಿಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ರು. ಆರ್ಥಿಕ ಸಹಾಯ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.
ದೇಶದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವ ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.
ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ಧ್ವನಿಗೂಡಿಸುತ್ತೇನೆ ಎಂದು ಕರೆ ನೀಡಿದ್ದಾರೆ.
ಕನ್ನಡಿಗರು ನೀಡಿರುವ ಜನಮತದಲ್ಲಿ, ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ.
ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು.
ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯ ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಬರಕ್ಕೆ ಬಿಡಿಗಾಸೂ ನೀಡದ ಕೇಂದ್ರ: ಹವಾಮಾನ ವೈಪರೀತ್ಯ, ಮಳೆಯ ತೀವ್ರ ಕೊರತೆಯಿಂದ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡಿಲ್ಲ. ರಾಜ್ಯ ಸರ್ಕಾರವೇ ಬರದಿಂದ ಬಾಧಿತರಾದವರಿಗೆ ಬೆಳೆ ಪರಿಹಾರವಾಗಿ 2 ಸಾವಿರ ರು.
ತಾತ್ಕಾಲಿಕ ಪರಿಹಾರ ಘೋಷಣೆ ಮಾಡಿದ್ದು, ಇಲ್ಲಿಯವರೆಗೂ ₹550 ಕೋಟಿ ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಪರಿಹಾರ ರೈತರಿಗೆ ತಲುಪಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.