3 ತಿಂಗಳು ತಡ ಮಾಡಿ ಕೇಳಿದ್ರು, ಅದಕ್ಕೇ ನೆರವು ದೊರೆತಿಲ್ಲ: ಶಾ

| Published : Apr 03 2024, 01:32 AM IST / Updated: Apr 03 2024, 04:46 AM IST

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರವು ಮೂರು ತಿಂಗಳು ತಡವಾಗಿ ಪ್ರಸ್ತಾವನೆ ಸಲ್ಲಿಸಿದ ಕಾರಣ ಕೇಂದ್ರ ಸರ್ಕಾರವು ಸಮಯಕ್ಕೆ ಸರಿಯಾಗಿ ಬರ ಪರಿಹಾರ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

 ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರವು ಮೂರು ತಿಂಗಳು ತಡವಾಗಿ ಪ್ರಸ್ತಾವನೆ ಸಲ್ಲಿಸಿದ ಕಾರಣ ಕೇಂದ್ರ ಸರ್ಕಾರವು ಸಮಯಕ್ಕೆ ಸರಿಯಾಗಿ ಬರ ಪರಿಹಾರ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಶಾ ಅವರ ಈ ಹೇಳಿಕೆಯು ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಭಾರಿ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕದಲ್ಲಿ ಬರಗಾಲವಿದೆ. ರಾಜ್ಯ ಸರ್ಕಾರದಿಂದ ಮೂರು ತಿಂಗಳು ತಡವಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರದ ಮನವಿ ಇದೀಗ ಚುನಾವಣಾ ಆಯೋಗದಲ್ಲಿ ಸಿಲುಕಿಕೊಂಡಿದೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಕೋರಿ ತಮ್ಮ ಸರ್ಕಾರ ಕೇಂದ್ರದ ಮೊರೆ ಹೋಗಿ ಐದು ತಿಂಗಳಾದರೂ ರಾಜ್ಯಕ್ಕೆ ಒಂದು ರುಪಾಯಿ ಕೂಡ ನೀಡಿಲ್ಲ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದರಿಂದ ಅಮಿತ್ ಶಾ ಅವರು ಬಿಜೆಪಿ ಸಮಾವೇಶದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ತಿರುಗೇಟು ನೀಡಿದರು.

ಮುಂದುವರೆದ ಅಮಿತ್ ಶಾ ಅವರು, ಹಿಂದಿನ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಯುಪಿಎ ಸರ್ಕಾರ ಕರ್ನಾಟಕಕ್ಕೆ ನೀಡಿದ್ದು ಕೇವಲ 1.42 ಲಕ್ಷ ಕೋಟಿ ರು. ಅನುದಾನ. ಆದರೆ, ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು 10 ವರ್ಷಗಳಲ್ಲಿ ಮೂರು ಪಟ್ಟು ಅನುದಾನ ನೀಡಿದೆ. 4.91 ಲಕ್ಷ ಕೋಟಿ ರು. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.