ಸಾರಾಂಶ
ಕನ್ನಡಪ್ರಭ ವಾರ್ತೆ ಹಾರೋಹಳ್ಳಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜಾತ್ಯತೀತ ತತ್ವಕ್ಕೆ ಕೊಳ್ಳಿ ಇಟ್ಟಿದ್ದಾರೆ, ರಾಜಕೀಯವಾಗಿ ನನಗೆ ವಿಷವಿಕ್ಕಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.
ನಾನು ಯಾರಿಗೂ ವಿಷ ಹಾಕುವವನಲ್ಲ, ನಾನು ಎಲ್ಲರಿಗೂ ಒಳ್ಳೆಯದನ್ನು ಬಯಸುವವನು ಎಂದು ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು ಏನು ಮಾತನಾಡಿದ್ದಾರೋ ಗೊತ್ತಿಲ್ಲ.
ಅವರ ಆರೋಗ್ಯ ಚೆನ್ನಾಗಿಲ್ಲ ಎಂದು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಆದಷ್ಟು ಬೇಗ ಆಸ್ಪತ್ರೆಯಿಂದ ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಕ್ಷೇತ್ರದಲ್ಲಿ ಗಿಫ್ಟ್ ಹಂಚುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಕುಮಾರಸ್ವಾಮಿ ಏನೇನು ಹೇಳುತ್ತಾರೋ ಗೊತ್ತಿಲ್ಲ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಪ್ಯಾರಾ ಮಿಲಿಟರಿ ಕರೆಸಬೇಕೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಯಾರನ್ನು ಬೇಕಾದರು ಕರೆಸಿಕೊಳ್ಳಲಿ.
ಪ್ಯಾರಾ ಮಿಲಿಟರಿಯನ್ನೇ ಕರೆಸಲಿ, ಪ್ರಧಾನಿ ಮೋದಿಯನ್ನೇ ಕರೆಸಲಿ. ನಾನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ, ಕೂಲಿ ಕೇಳ್ತಿದ್ದೇನೆ ಎಂದು ತಿಳಿಸಿದರು.