ಸಾರಾಂಶ
2028ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು. ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರನ್ನು ಉದ್ದೇಶಿಸಿ ಹೇಳಿದರು.
ಕಲಬುರಗಿ: 2028ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು. ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರನ್ನು ಉದ್ದೇಶಿಸಿ ಹೇಳಿದರು.
ಕಲಬುರಗಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಅನೇಕ ಸ್ಥಳೀಯ ಸಂಸ್ಥೆಗಳಲ್ಲಿ ಹೆಂಡತಿಯನ್ನು ಸದಸ್ಯೆಯನ್ನಾಗಿಸಿ ಗಂಡ ಅಧಿಕಾರ ಚಲಾಯಿಸುತ್ತಾ ಇರುತ್ತಾನೆ. ಮುಂದಕ್ಕೆ ಇದೆಲ್ಲಾ ಕಡಿಮೆಯಾಗುತ್ತದೆ. ಮಹಿಳೆಯರೇ ಇದನ್ನೆಲ್ಲಾ ಸಮರ್ಥವಾಗಿ ನಿಭಾಯಿಸುತ್ತಾರೆ ಎಂದರು.
ಸೋನಿಯಾ ಗಾಂಧಿ ನಾಯಕತ್ವದಲ್ಲಿ, ಮನಮೋಹನ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಲು ಹೋಗಿತ್ತು. ಕಾರಣಾಂತರಗಳಿಂದ ಆ ಮಹತ್ವದ ಕಾರ್ಯ ಜಾರಿಗೆ ಬರಲಿಲ್ಲ. ಈಗ ಆ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಮುಂದಿನ ವಿಧಾನಸಭಾ, ಲೋಕಸಭಾ ಚುನಾವಣೆಗೆ ಮಹಿಳಾ ಮೀಸಲಾತಿ ಇರುತ್ತದೆ ಎಂದರು.
ಮಹಿಳಾ ಮೀಸಲಾತಿ ಜಾರಿಯಾದರೆ ಇಲ್ಲಿ ಇರುವ ಯಾರ ಸ್ಥಾನ ಹೋಗುತ್ತದೆ ಎಂದು ಹೇಳಲು ಆಗುವುದಿಲ್ಲ. ಅಜಯ್ ಸಿಂಗ್, ಅಲ್ಲಮಪ್ರಭು, ಬಿ.ಆರ್.ಪಾಟೀಲ್, ಪ್ರಿಯಾಂಕ್ ಖರ್ಗೆ ಯಾರದ್ದು ಬೇಕಾದರೂ ಆಗಬಹುದು. ಅದಕ್ಕೆ ಈಗಿನಿಂದಲೇ ಸಜ್ಜಾಗಿ ಎಂದರು.