ಸಾರಾಂಶ
ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.
ವಿಜಯ್ ಮಲಗಿಹಾಳ
ಬೆಂಗಳೂರು : ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.
‘ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡುವ ಮಾತೇ ಇಲ್ಲ. ನನಗೆ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಟಿಕೆಟ್ ಆಕಾಂಕ್ಷಿಯೂ ಆಗಿರುವ ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಖಡಕ್ಕಾಗಿ ಹೇಳಿದ್ದಾರೆ.
ಒಟ್ಟಿನಲ್ಲಿ ಉಪಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿರುವ ಯೋಗೇಶ್ವರ್ ಅವರು ಸೋಮವಾರ ದೆಹಲಿಗೆ ತೆರಳಲಿದ್ದು, ಎರಡು ಅಥವಾ ಮೂರು ದಿನಗಳ ಕಾಲ ಅಲ್ಲಿ ವಾಸ್ತವ್ಯ ಹೂಡುವ ಮೂಲಕ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ತಮಗೆ ಯಾಕೆ ಟಿಕೆಟ್ ನೀಡಬೇಕು ಎಂಬುದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಲಿದ್ದಾರೆ.
ಭಾನುವಾರ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಯೋಗೇಶ್ವರ್, ಸೋಮವಾರ ದೆಹಲಿಗೆ ತೆರಳಿ ಮೊದಲು ರಾಜ್ಯವನ್ನು ಪ್ರತಿನಿಧಿಸುವ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಚರ್ಚಿಸುವೆ. ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಕಂಡು ಟಿಕೆಟ್ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಪಕ್ಷದ ವರಿಷ್ಠರಿಗೆ ನನ್ನ ನಿಲುವು ಹೇಳಿ ಬರುತ್ತೇನೆ. ನನಗೆ ಟಿಕೆಟ್ ನೀಡದೆ ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಆ ಕ್ಷೇತ್ರ ಕಾಂಗ್ರೆಸ್ ಪಾಲಾಗಬಹುದು. ಹೀಗಾಗಿ, ನನಗೇ ಟಿಕೆಟ್ ನೀಡುವಂತೆ ಕೇಳುತ್ತೇನೆ. ವರಿಷ್ಠರು ನಂತರ ನಮ್ಮ ಪಕ್ಷದ ರಾಜ್ಯ ನಾಯಕರನ್ನು ಕರೆದು ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಮಾತನಾಡಬಹುದು. ಅವರ ಅಭಿಪ್ರಾಯವನ್ನು ಕೇಳಬಹುದು. ಆಮೇಲೆ ಮುಂದಿನದನ್ನು ನೋಡೋಣ ಎಂದರು.
ಒಂದು ವೇಳೆ ವರಿಷ್ಠರು ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ನಿರ್ಧಾರ ಕೈಗೊಂಡರೆ ಏನು ಮಾಡುವಿರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಯಾವುದೇ ಕಾರಣಕ್ಕೂ ನಾನು ಕ್ಷೇತ್ರವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಟಿಕೆಟ್ ಕೊಡದೇ ಇದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುವೆ ಎಂದು ಸ್ಪಷ್ಟವಾಗಿ ತಿಳಿಸಿದರು.
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))