ಸಾರಾಂಶ
ಬೆಂಗಳೂರು : ನಗರದಲ್ಲಿ ಬಿ ಖಾತಾ ನಿವೇಶನಗಳಲ್ಲಿ ನಿರ್ಮಾಣಗೊಂಡ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ಇರುವುದಿಲ್ಲ. ಈ ರೀತಿಯ ಕಟ್ಟಡಗಳನ್ನು ಯಾವ ಮಾದರಿಯಲ್ಲಿ ತೆರವುಗೊಳಿಸಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಎ ಖಾತಾ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಮಾತ್ರ ಬಿಬಿಎಂಪಿಯಿಂದ ನಕ್ಷೆ ಮಂಜೂರಾತಿ, ಕಟ್ಟಡ ನಿರ್ಮಾಣ ಅನುಮತಿ ಹಾಗೂ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ, ಬಿ ಖಾತಾ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡುವುದಿಲ್ಲ. ಸಾಕಷ್ಟು ಸಂಖ್ಯೆಯ ಬಿ ಖಾತಾ ನಿವೇಶನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡಗಳ ಕುರಿತು ತೆಗೆದುಕೊಳ್ಳುವ ಕ್ರಮದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನಗರದಲ್ಲಿ ಅಕ್ರಮ ಕಟ್ಟಡ ಪರಿಶೀಲನೆ ವೇಳೆ ಬಿ ಖಾತಾ ನಿವೇಶನಗಳಲ್ಲಿನ ಕಟ್ಟಡದ ಬಿಬಿಎಂಪಿ ಕಟ್ಟಡ ಉಪವಿಧಿ (ಬೈಲಾ) ಉಲ್ಲಂಘನೆಯನ್ನು ಪರಿಶೀಲಿಸಿ ಅಧಿಕಾರಿಗಳು ನಮೂದಿಸುತ್ತಿಲ್ಲ. ಆ ರೀತಿ ಮಾಡದೇ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ಇಲ್ಲದಿದ್ದರೂ ಪಾಲಿಕೆಯ ಕಟ್ಟಡ ಉಪವಿಧಿಯ ನಿಯಮ ಉಲ್ಲಂಘಿಸಿದ ಅಂಶಗಳನ್ನು ದಾಖಲು ಮಾಡಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಅಕ್ರಮ ಕಟ್ಟಡದ ತೆರವಿಗೆ ಹೊಸ ಮಾರ್ಗಸೂಚಿ ಇಲ್ಲ: ನಗರದಲ್ಲಿ ಅಕ್ರಮ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣಗೊಂಡ ಕಟ್ಟಡಗಳ ತೆರವುಗೊಳಿಸುವ ಕುರಿತು ಹೊಸದಾಗಿ ಯಾವುದೇ ಮಾರ್ಗಸೂಚಿ ನೀಡಿಲ್ಲ. ಜಾರಿಯಲ್ಲಿರುವ ಕಾರ್ಯ ವಿಧಾನ ಮತ್ತು ಕಟ್ಟಡ ಉಪ ವಿಧಿಯ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು.