ಸಾರಾಂಶ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ರಜೆ ದಿನವಾದ ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದ್ದಾರೆ.
ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಭಾನುವಾರ ವಲಯ ಅಧಿಕಾರಿಗಳು, ಎಂಜಿನಿಯರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ನಡೆಸಬೇಕೆಂದು ಸೂಚಿಸಿದ್ದಾರೆ.
ಆಯಾ ವಲಯದ ಎಲ್ಲ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮಳೆಯೊಂದಿಗೆ ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆ ಇರುವುದರಿಂದ 28 ಮರ ಕಟಾವು ತಂಡಗಳು ಸಿದ್ಧವಾಗಿರಬೇಕು. ಮರ ಹಾಗೂ ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೇ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್‌ಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟುಕೊಂಡು ಮಳೆಯಿಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು.
ರಾಜಕಾಲುವೆಗಳಲ್ಲಿ ಜೆಸಿಬಿಗಳ ಮೂಲಕ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ರಸ್ತೆ ಬದಿಯ ಶೋಲ್ಡರ್ ಚರಂಡಿಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಸಭೆಯಲ್ಲಿ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಡಾ। ಕೆ.ಹರೀಶ್ ಕುಮಾರ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್, ಕರೀಗೌಡ, ರಮೇಶ್, ರಮ್ಯಾ, ಸ್ನೇಹಲ್ ಉಪಸ್ಥಿತರಿದ್ದರು.