ಸಾರಾಂಶ
ಹತ್ತು ಹಾಗೂ ಹತ್ತಕ್ಕೂ ಹೆಚ್ಚು ಜನರು ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು.
ಬೆಂಗಳೂರು : ಹತ್ತು ಹಾಗೂ ಹತ್ತಕ್ಕೂ ಹೆಚ್ಚು ಜನರು ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆ ನಡೆಸಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ, ಖಾಸಗಿ ಕಚೇರಿ, ನಿಗಮ, ಮಂಡಳಿಗಳು, ಸಾರ್ವಜನಿಕ ವಿಶ್ವವಿದ್ಯಾಲಯ, ಶಾಲಾ-ಕಾಲೇಜು, ಸಂಘ-ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಹಾಗೂ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಆಂತರಿಕ ಸಮಿತಿ ರಚನೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದರಾಮಣ್ಣ ಮಾತನಾಡಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಕ್ಷೇತ್ರಗಳಲ್ಲಿ ಹೆಚ್ಚು ಮಹಿಳೆಯರಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಸಮಿತಿ ರಚನೆಗೆ ಕಾರ್ಯೋನ್ಮುಖರಾಗಬೇಕು. ಹತ್ತಕ್ಕಿಂತ ಕಡಿಮೆ ಇರುವ ಘಟಕಗಳು ವರದಿ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.