ಸಾರಾಂಶ
ನಗರದ ರಸ್ತೆ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಐದು ಪಾಲಿಕೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ರಸ್ತೆ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಐದು ಪಾಲಿಕೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.ಐದು ನಗರ ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದ ಅವರು, ಇದೀಗ ಕೈಕೊಂಡಿರುವ 143 ಕಿ.ಮೀ ಉದ್ದದ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ. 349 ಕಿ.ಮೀ ಉದ್ದದ ರಸ್ತೆಯ ಡಾಂಬರೀಕರಣ ಕಾಮಗಾರಿಯನ್ನು ನವೆಂಬರ್ ವೇಳೆಗೆ ಪೂರ್ಣಗೊಳಿಸಬೇಕು. ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ನಿರ್ವಹಣೆ ಅವಧಿ ಮುಕ್ತಾಯಗೊಳ್ಳದ ರಸ್ತೆಯಲ್ಲಿ ಸಂಬಂಧ ಪಟ್ಟ ಗುತ್ತಿಗೆದಾರರಿಂದ ಕಾಮಗಾರಿ ನಡೆಸುವಂತೆ ಸೂಚಿಸಬೇಕು. ದುರಸ್ತಿ ಪಡಿಸದ ಗುತ್ತಿಗೆದಾರರ ಬಿಲ್ ಮೊತ್ತ ಕಡಿತಗೊಳಿಸಬೇಕು. ರಸ್ತೆಗಳು ಸ್ಥಿತಿಗತಿ ಬಗ್ಗೆ ಆಯಾ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜತೆ ಸಭೆ ನಡೆಸಿ ಕಾಲಮಿತಿಯಲ್ಲಿ ಕಾಮಗಾರಿ ನಡೆಸಿ, ಹೈಡೆನ್ಸಿಟಿ ಕಾರಿಡಾರ್ ಗಳಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಹೇಳಿದರು.ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರಚೊಳನ್, ಡಿ.ಎಸ್.ರಮೇಶ್, ಪೊಮ್ಮಲ ಸುನಿಲ್ ಕುಮಾರ್, ಕೆ.ಎನ್. ರಮೇಶ್, ಡಾ.ಕೆ.ವಿ.ರಾಜೇಂದ್ರ ಮೊದಲಾದ ಅಧಿಕಾರಿಗಳಿದ್ದರು.