ಸಾರಾಂಶ
ಬೆಂಗಳೂರು : ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು.
ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಸಚಿವರಾದ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪ್ರದಾನ ಮಾಡಿದರು.ಸುವರ್ಣ ಮಹೋತ್ಸವ ಪ್ರಶಸ್ತಿಗೆ ಜಾಣಗೆರೆ ವೆಂಕಟರಾಮಯ್ಯ, ಇಂದೂಧರ ಹೊನ್ನಾಪುರ, ಸುಭಾಷ್ ಕೆವಿನ್ ರೈ, ಜಿ.ಎಸ್.ಕೃಷ್ಣಮೂರ್ತಿ, ಡಾ.ನಾಗೇಶ್ ಬಸವರಾಜ್ ಅವರಿಗೆ ಪ್ರದಾನ ಮಾಡಲಾಯಿತು. ಜೊತೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ವಿಶೇಷ ಯೋಜನೆಗಳ ಸಂಪಾದಕ ವಿನೋದಕುಮಾರ್ ಬಿ.ನಾಯ್ಕ್ ಸೇರಿ ಸಾಧಕ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು ಪ್ರೆಸ್ ಕ್ಲಬ್ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ ಭಾನುವಾರ ನಡೆಯಿತು.
ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿದ್ದು ನಮ್ಮ ಜವಾಬ್ದಾರಿ ಹೆಚ್ಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರಿಂದಲೆ ಸಚಿವ ಸ್ಥಾನ ವಹಿಸಿಕೊಂಡ ಇಲಾಖೆಗಳಲ್ಲಿ ಬದಲಾವಣೆ ತರಲು ಸಾಧ್ಯವಾಗಿದೆ. ಇನ್‌ವೆಸ್ಟ್‌ಮೆಂಟ್ ಕರ್ನಾಟಕ ಫೋರಂ, ಇಂಡಸ್ಟ್ರಿಯಲ್ ಪಾಲಿಸಿ ಮಾರ್ಪಾಡು, ವಿಷನ್ ಗ್ರೂಪ್ ರಚನೆ ಸೇರಿ ಹಲವು ಕ್ರಮ ವಹಿಸಿ ರಾಜ್ಯಕ್ಕೆ ಬಂಡವಾಳ ಹರಿದು ಬರಲು ಬದಲಾವಣೆ ತರಲಾಗಿದೆ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕರ್ನಾಟಕ ಮಾಡಲ್‌ನ ಗೃಹಲಕ್ಷ್ಮೀ ಯೋಜನೆ ದೇಶದಲ್ಲಿ ಖ್ಯಾತಿ ಪಡೆದಿದೆ. ತಾಂತ್ರಿಕ ದೋಷ ಸೇರಿ ಇತರೆ ಸಮಸ್ಯೆ ಮೀರಿ 1.26 ಕೋಟಿ ಮಹಿಳೆಯರಿಗೆ ತಿಂಗಳಿಗೆ ₹2 ಸಾವಿರ ಒದಗಿಸಲಾಗುತ್ತಿದೆ. ಈ ಯೋಜನೆಯಿಂದ ರಾಜ್ಯದ ಬಡ ಕುಟುಂಬಗಳಿಗೆ ಈ ಯೋಜನೆ ಸಾಕಷ್ಟು ನೆರವಾಗಿದೆ ಎಂದರು.
ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಇದ್ದರು.