ಸಾರಾಂಶ
58 ಸ್ಥಾನಗಳನ್ನು ಪಡೆದಿದ್ದ ಜೆಡಿಎಸ್, ನಂತರದ ಚುನಾವಣೆಗಳಲ್ಲಿ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದಿದ್ದಾರೆ. 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಶಾಸಕರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯನವರಿಗೆ ಉತ್ತರ ನೀಡಬೇಕಿದೆ - ನಿಖಿಲ್ ಕುಮಾರಸ್ವಾಮಿ
ಶಿವಮೊಗ್ಗ : 58 ಸ್ಥಾನಗಳನ್ನು ಪಡೆದಿದ್ದ ಜೆಡಿಎಸ್, ನಂತರದ ಚುನಾವಣೆಗಳಲ್ಲಿ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದಿದ್ದಾರೆ. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಹೀಗಾಗಿ, 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಶಾಸಕರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯನವರಿಗೆ ಉತ್ತರ ನೀಡಬೇಕಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಬುಧವಾರ ನಡೆದ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರಕ್ಕೆ ಹೋಗಬೇಕೆಂಬುದು ಅವರ ಮನಸ್ಸಿನಲ್ಲಿ ಇರಲಿಲ್ಲ, ಕಾರ್ಯಕರ್ತರ ಮನಸ್ಸಿನಲ್ಲೂ ಇರಲಿಲ್ಲ. ವಿಧಾನಸಭಾ ಕಲಾಪದಲ್ಲಿ ಕುಮಾರಸ್ವಾಮಿಯವರು ಇದ್ದಿದ್ದರೆ ಯಾವ ರೀತಿ ತೊಡೆ ತಟ್ಟಿ ಮಾತನಾಡುತ್ತಿದ್ದರು ಎಂಬುದನ್ನು ನೋಡಿದ್ದೇವೆ. ಸದನದಲ್ಲಿ ಬಹಳಷ್ಟು ಜನ ಕುಮಾರಣ್ಣರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳು ಇಂದು ಸಮರ್ಪಕವಾಗಿ ಇಲ್ಲಿಯವರೆಗೆ ನೀಡಲು ಸಾಧ್ಯವಾಗಿದೆಯೇ ಎಂಬುದಕ್ಕೆ ಸರ್ಕಾರವೇ ಉತ್ತರ ಕೊಡಬೇಕು. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಸಾರ್ವಜನಿಕರ ಮೇಲೆ ಗದಾಪ್ರಹಾರ ನಡೆಸುತ್ತಿದೆ. ಕುಡಿಯುವ ಗಾಳಿಯೊಂದನ್ನು ಬಿಟ್ಟು ಪ್ರತಿಯೊಂದಕ್ಕೂ ಸರ್ಕಾರ ತೆರಿಗೆ ವಿಧಿಸುತ್ತಿದೆ. ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ಭಾರವನ್ನು ಹೊರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹರಿಹಾಯ್ದರು.
ಮಹಿಳೆಯರಿಗೆ ಪ್ರತಿ ತಿಂಗಳು ₹2 ಸಾವಿರ ಗೃಹಲಕ್ಷ್ಮಿ ಹಣವನ್ನು ನೀಡುತ್ತಿದ್ದೇವೆ. ಇದರಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ, ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಕೊಟ್ಟಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಸ್ಥಳೀಯ ಚುನಾವಣೆಯಲ್ಲಿ ಶೇ.50ರಷ್ಟು ಮಹಿಳಾ ಮೀಸಲಾತಿಗೆ ಅವಕಾಶ ಮಾಡಿಕೊಡುವ ಮೂಲಕ ಮಹಿಳೆಯ ಪರ ನಿಂತಿದ್ದಾರೆ. ದೇವೇಗೌಡ ಅವರು ಪ್ರಧಾನ ಮಂತ್ರಿಯಾಗಿದ್ದಾಗ ವಿಧಾನಸೌಧದಲ್ಲಿ, ಸಂಸತ್‌ನಲ್ಲಿ ಹೆಚ್ಚು ಮಹಿಳೆಯರನ್ನು ಕಾಣಬೇಕು ಎಂಬ ಕಲ್ಪನೆ ಇಟ್ಟುಕೊಂಡು ಅವರು ಅಂದು ಮಾಡಿದ ಬಿಲ್ಲನ್ನು ಇಟ್ಟುಕೊಂಡು, ಇವತ್ತು ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮೂಲಕ ಹೆಚ್ಚು ಮಹಿಳೆಯರಿಗೆ ಸಂಸತ್ ಹಾಗೂ ವಿಧಾನಸೌಧದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.
2028ರ ವಿಧಾನಸಭಾ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಮುಂದೆ ಬರುವ ಜಿಪಂ, ತಾಪಂ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷದ ಸಂಘಟನೆಗೆ ಇನ್ನಷ್ಟು ಬಲ ನೀಡುವ ಉದ್ದೇಶದಿಂದ ಈಗಿನಿಂದಲೇ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.