ಯುವ ಸ್ಟಾರ್‌ ಪ್ರಖರ್‌ ಆಟವನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

| Published : Jan 17 2024, 01:45 AM IST

ಯುವ ಸ್ಟಾರ್‌ ಪ್ರಖರ್‌ ಆಟವನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಕೂಚ್‌ ಬೆಹಾರ್‌ ಟ್ರೋಫಿಯ ಫೈನಲ್‌ನಲ್ಲಿ ಪ್ರಖರ್‌ ಚತುರ್ವೇದಿ 404 ರನ್‌ ಗಳಿಸಿದ್ದರು. ಟೂರ್ನಿಯಲ್ಲಿ ಕರ್ನಾಟಕ ಚೊಚ್ಚಲ ಬಾರಿ ಚಾಂಪಿಯನ್‌ ಎನಿಸಿಕೊಂಡಿತ್ತು. ಚತುರ್ವೇದಿಯನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಂಡದ ಸಾಧನೆಗೂ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೂಚ್‌ ಬೆಹಾರ್‌ ಟ್ರೋಫಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್‌ ಆದ ಕರ್ನಾಟಕ ತಂಡ ಹಾಗೂ ಫೈನಲ್‌ನಲ್ಲಿ ಔಟಾಗದೆ 404 ರನ್‌ ಗಳಿಸಿದ ಪ್ರಖರ್‌ ಚತುರ್ವೇದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ ಎಂದಿದ್ದಾರೆ. ‘ಆರಂಭಿಕ ಬ್ಯಾಟರ್‌ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಕೊನೆ ಪಂದ್ಯದಲ್ಲಿ ಬಿಹಾರ ವಿರುದ್ಧ 153 ರನ್‌ಗಳ ಬೃಹತ್‌ ಗೆಲುವು ಸಾಧಿಸಿದ ಹೊರತಾಗಿಯೂ ರಾಷ್ಟ್ರೀಯ ಮಹಿಳಾ ಏಕದಿನ ಟೂರ್ನಿಯಲ್ಲಿ ಕರ್ನಾಟಕ ನಾಕೌಟ್‌ ಪ್ರವೇಶಿಸಲು ವಿಫಲವಾಗಿದೆ. ‘ಬಿ’ ಗುಂಪಿನಲ್ಲಿ ಆಡಿದ 7 ಪಂದ್ಯಗಳಲ್ಲಿ 4 ಗೆಲುವು, 3 ಸೋಲಿನೊಂದಿಗೆ 16 ಅಂಕಗಳಿಸಿದ ರಾಜ್ಯ ತಂಡ, ಅಂಕಪಟ್ಟಿಯಲ್ಲಿ 5ನೇ ಸ್ಥಾನಿಯಾಯಿತು. ಮಂಗಳವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜ್ಯ ತಂಡ ಮಿಥಿಲಾ ವಿನೋದ್‌(ಔಟಾಗದೆ 61), ನಿಕಿ ಪ್ರಸಾದ್‌(58), ವೃಂದಾ ದಿನೇಶ್‌(52) ಅಬ್ಬರದ ನೆರವಿನಿಂದ 9 ವಿಕೆಟ್‌ಗೆ 259 ರನ್ ಕಲೆಹಾಕಿತು. ದೊಡ್ಡ ಗುರಿ ಬೆನ್ನತ್ತಿದ ಬಿಹಾರ 50 ಓವರಲ್ಲಿ 9 ವಿಕೆಟ್‌ಗೆ 106 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.